ಹಾಸನ : ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ದೇವರಾಜೇಗೌಡ ಅವರಿಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಪ್ರಕರಣದ ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ದೋಷಾರೋಪ ಪಟ್ಟಿಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಅನುಮತಿ ನೀಡಿದೆ. ಈ ಮೂಲಕ ಈ ಹಿಂದೆ ನೀಡಲಾಗಿದ್ದ ಮಧ್ಯಂತರ ನಿರ್ಬಂಧ ಆದೇಶವನ್ನು ತೆರವುಗೊಳಿಸಲಾಗಿದೆ.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ಪ್ರಕರಣದ ತನಿಖೆ ಸಂಪೂರ್ಣವಾಗಿ ಮುಗಿದಿದ್ದು, ಚಾರ್ಜ್ಶೀಟ್ ಸಲ್ಲಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆರೋಪಗಳ ಸ್ವರೂಪ ಗಂಭೀರವಾಗಿರುವುದರಿಂದ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಇನ್ನೊಂದೆಡೆ, ದೇವರಾಜೇಗೌಡ ಪರ ವಕೀಲರು ಈ ಪ್ರಕರಣ ರಾಜಕೀಯ ಪ್ರೇರಿತವಾಗಿದ್ದು, ಅರ್ಜಿದಾರರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ನಡೆಯುತ್ತಿದೆ ಎಂದು ವಾದ ಮಂಡಿಸಿದರು. ಆರಂಭದಲ್ಲಿ ದೂರುದಾರೆ ಮಹಿಳೆ ಅತ್ಯಾಚಾರದ ಆರೋಪ ಮಾಡಿರಲಿಲ್ಲ. ಮೊದಲು ದಾಖಲಾದ ಅಟ್ರಾಸಿಟಿ ಪ್ರಕರಣಕ್ಕೆ ಪೊಲೀಸರು ‘ಬಿ-ರಿಪೋರ್ಟ್’ ಸಲ್ಲಿಸಿದ್ದರಿಂದ, ಬಳಿಕ ಸುಳ್ಳು ಆರೋಪಗಳನ್ನು ಹೊರಿಸಲಾಗಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.
ಎರಡೂ ಪಕ್ಷಗಳ ವಾದ ಆಲಿಸಿದ ಹೈಕೋರ್ಟ್, ಪ್ರಕರಣದ ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅಂತಿಮ ವರದಿ ಸಲ್ಲಿಕೆಗೆ ಅವಕಾಶ ನೀಡಿದ್ದು, ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಈ ಆದೇಶದೊಂದಿಗೆ ದೇವರಾಜೇಗೌಡ ವಿರುದ್ಧದ ಪ್ರಕರಣದಲ್ಲಿ ನ್ಯಾಯಾಂಗ ಪ್ರಕ್ರಿಯೆ ಮತ್ತೊಂದು ಮಹತ್ವದ ಹಂತ ತಲುಪಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.