ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲದ ವಿರುದ್ಧ ಸಿಸಿಬಿ ಮಹಿಳಾ ಸಂರಕ್ಷಣಾ ದಳ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಮೂವರು ಮಹಿಳೆಯರನ್ನು ರಕ್ಷಿಸಿ ನಾಲ್ವರನ್ನು ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಮಹಿಳೆ ತಲೆಮರೆಸಿಕೊಂಡಿದ್ದು, ಆಕೆಯ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಆರೋಪಿಗಳು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಬಾಡಿಗೆ ಮನೆಗಳನ್ನು ಪಡೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಈ ಕುರಿತು ಸಿಸಿಬಿ ಮಹಿಳಾ ಸಂರಕ್ಷಣಾ ದಳಕ್ಕೆ ಖಚಿತ ಮಾಹಿತಿ ಲಭಿಸಿದ್ದರಿಂದ ಕಳೆದ ವಾರ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಲಾಯಿತು.
ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಟಿ.ದಾಸರಹಳ್ಳಿ, ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯ ಜರಗನಹಳ್ಳಿ ಹಾಗೂ ಚಂದ್ರಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮೂಡಲಪಾಳ್ಯ ಮುಖ್ಯ ರಸ್ತೆಯಲ್ಲಿರುವ ಬಾಡಿಗೆ ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದರು. ಕಾರ್ಯಾಚರಣೆಯ ವೇಳೆ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಆರೋಪದಡಿ ಒಬ್ಬ ಪುರುಷ ಮತ್ತು ಮೂವರು ಮಹಿಳೆಯರನ್ನು ವಶಕ್ಕೆ ಪಡೆಯಲಾಯಿತು.
ದಾಳಿಯ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಹೊರರಾಜ್ಯದ ಇಬ್ಬರು ಮಹಿಳೆಯರು ಹಾಗೂ ಸ್ಥಳೀಯ ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ. ಬಂಧಿತರಿಂದ ವಿಚಾರಣೆ ನಡೆಸಿದಾಗ, ಗ್ರಾಹಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನೆಗಳಿಗೆ ಕರೆಸಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದುದಾಗಿ ತಿಳಿದುಬಂದಿದೆ.
ಪ್ರಕರಣ ಸಂಬಂಧ ಬಾಗಲಗುಂಟೆ, ಪುಟ್ಟೇನಹಳ್ಳಿ ಮತ್ತು ಚಂದ್ರಲೇಔಟ್ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಮಹಿಳೆಯ ಪತ್ತೆಗಾಗಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.