ಕಲಬುರಗಿ: ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರೆನ್ನಲಾದ ಮಹಿಳೆ ಹಾಗೂ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸಂಕನೂರು ಗ್ರಾಮದ ಹೊರವಲಯದ ಗುಡ್ಡ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು ಚಿತ್ತಾಪುರ ಪಟ್ಟಣದ ಶರಣಮ್ಮ (32) ಹಾಗೂ ಯಾದಗಿರಿ ಜಿಲ್ಲೆಯ ಬಾಚವಾರ ಗ್ರಾಮದ ಬಸವರಾಜ್ (21) ಎಂದು ಗುರುತಿಸಲಾಗಿದೆ.
ಇವರಿಬ್ಬರ ನಡುವೆ ಹಲವು ವರ್ಷಗಳಿಂದ ಪ್ರೇಮ ಸಂಬಂಧವಿತ್ತು ಎನ್ನಲಾಗಿದೆ. ಆದರೆ ಇವರ ಪ್ರೀತಿಗೆ ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದ್ದು, ಇದೇ ಕಾರಣಕ್ಕೆ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.
ಇಬ್ಬರೂ ಎರಡು–ಮೂರು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮಾಹಿತಿ ತಿಳಿದು ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ವಶಕ್ಕೆ ಪಡೆದು ಅಗತ್ಯ ಕಾನೂನು ಕ್ರಮ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರೀತಿ ಸಂಬಂಧದ ವಿಚಾರದಲ್ಲಿ ಕುಟುಂಬದ ವಿರೋಧ, ಇಬ್ಬರ ನಡುವಿನ ಸಂಬಂಧ ಹಾಗೂ ಆತ್ಮಹತ್ಯೆಗೆ ಕಾರಣವಾಗಿರಬಹುದಾದ ಇತರ ಅಂಶಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
⚠️ ಸೂಚನೆ: ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ಸಂಕಷ್ಟದಲ್ಲಿರುವವರು ವಿಶ್ವಾಸಾರ್ಹ ವ್ಯಕ್ತಿಗಳು ಅಥವಾ ವೃತ್ತಿಪರ ಸಹಾಯವನ್ನು ಸಂಪರ್ಕಿಸುವುದು ಮುಖ್ಯ.
ವರದಿ: ನವೀನ್ ಕುಮಾರ್