ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ಡಿಪ್ಕೆ ಮೇಲೆ ಹಲ್ಲೆ; ಪ್ರತಿಭಟನೆ ವೇಳೆ ಕಿಡಿಗೇಡಿಗಳ ದಾಳಿ
ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ಡಿಪ್ಕೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸಂಚಲನ ಮೂಡಿಸಿದೆ.
ಶಹೀದ್ ಸ್ಮಾರಕದ ಬಳಿ ಆಯೋಜಿಸಿದ್ದ ಪ್ರತಿಭಟನಾ ಸಭೆಗೆ ಅಭಿಜೀತ್ ಡಿಪ್ಕೆ ಅವರನ್ನು ಬೆಂಬಲಿಗರು ಹೆಗಲ ಮೇಲೆ ಹೊತ್ತು ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಕೆಲ ವ್ಯಕ್ತಿಗಳು ಏಕಾಏಕಿ ಗುಂಪಿನೊಳಗೆ ನುಗ್ಗಿದ್ದಾರೆ. ಈ ವೇಳೆ ಅವರ ಕುತ್ತಿಗೆಯಲ್ಲಿದ್ದ ಸ್ಕಾರ್ಫ್ ಎಳೆದು ಮುಖಕ್ಕೆ ಹಲವು ಬಾರಿ ಹೊಡೆದಿರುವುದಲ್ಲದೆ, ಕೆಳಗೆ ಬೀಳಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ಈ ಪ್ರತಿಭಟನೆ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್ಇಗೆ ಸಂಬಂಧಿಸಿದ ವಿವಾದಗಳ ಕುರಿತು ಕೇಂದ್ರ ಸರ್ಕಾರದ ವಿರುದ್ಧ ನಡೆಸಲಾಗುತ್ತಿತ್ತು. ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅಭಿಜೀತ್ ಡಿಪ್ಕೆ ಆಗ್ರಹಿಸಿದ್ದಾರೆ.
ಅಲ್ಲದೆ, ತಮ್ಮ ಬೇಡಿಕೆ ಈಡೇರದಿದ್ದರೆ ದೆಹಲಿಯಲ್ಲಿ ಮತ್ತಷ್ಟು ದೊಡ್ಡ ಮಟ್ಟದ ಪ್ರತಿಭಟನೆ ಆರಂಭಿಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಈ ಹೋರಾಟವು ದೇಶದ ವಿದ್ಯಾರ್ಥಿಗಳು ಮತ್ತು ಯುವಜನರ ಹಕ್ಕುಗಳಿಗಾಗಿ ಮುಂದುವರಿಯಲಿದೆ ಎಂದು ಅವರು ತಿಳಿಸಿದ್ದಾರೆ.
ಜೈಪುರದಲ್ಲಿ ನಡೆದ ಈ ಹಲ್ಲೆ ಪ್ರಕರಣ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಪ್ರತಿಭಟನಾ ವೇಳೆ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.