ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಸಮೀಪ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಟಿಪ್ಪರ್ ಲಾರಿಯ ಟೈರ್ ಸ್ಫೋಟಗೊಂಡ ಪರಿಣಾಮ ವಾಹನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಲಭ್ಯವಾದ ಮಾಹಿತಿಯ ಪ್ರಕಾರ, ಚಡಚಣದತ್ತ ಸಾಗುತ್ತಿದ್ದ ಟಿಪ್ಪರ್ನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಗೆ ಜಾರಿಕೊಂಡು ವಿಜಯಪುರದತ್ತ ತೆರಳುತ್ತಿದ್ದ ಸರ್ಕಾರಿ ಬಸ್ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಭಾರೀ ಪ್ರಮಾಣದಲ್ಲಿ ಜಖಂಗೊಂಡಿವೆ.
ಅಪಘಾತದಲ್ಲಿ ಟಿಪ್ಪರ್ ಚಾಲಕ ಅಶೋಕ ಉಟಗಿ, ಅವರ ಪತ್ನಿ ರಾಧಾಬಾಯಿ ಉಟಗಿ ಹಾಗೂ ಸರ್ಕಾರಿ ಬಸ್ ಚಾಲಕ ಹನುಮಂತ ಛವಲಾದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ 10 ಮಂದಿ ಪ್ರಯಾಣಿಕರನ್ನು ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಚಡಚಣ ಪೊಲೀಸ್ ಠಾಣೆಯ ಪಿಎಸ್ಐ ಸೊಮೇಶ ಗೆಜ್ಜಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸ್ಥಳೀಯರಲ್ಲಿ ಈ ದುರ್ಘಟನೆ ಆತಂಕ ಮೂಡಿಸಿದ್ದು, ಲೋಣಿ ಕ್ರಾಸ್ ಭಾಗದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಶ್ನೆಗಳು ಕೇಳಿಬರುತ್ತಿವೆ.