ಮಂಡ್ಯ: ವಿದ್ಯಾರ್ಥಿನಿಯರಿಗೆ ಮೊಬೈಲ್ ಮೂಲಕ ನಿರಂತರವಾಗಿ ಅಸಭ್ಯ ಸಂದೇಶಗಳನ್ನು ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಕಾಲೇಜಿನ ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ-ಮಂಡ್ಯ ರಸ್ತೆಯಲ್ಲಿರುವ ಪದವಿ ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನ ಉಪನ್ಯಾಸಕ ಗಂಗೂ ಎಂಬಾತ ವಿದ್ಯಾರ್ಥಿನಿಯರ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು ವೈಯಕ್ತಿಕವಾಗಿ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಚಾಟಿಂಗ್ ವೇಳೆ ‘I Love You’, ‘I Like You’ ಎಂಬಂತಹ ಸಂದೇಶಗಳನ್ನು ಕಳುಹಿಸುವ ಮೂಲಕ ವಿದ್ಯಾರ್ಥಿನಿಯರಿಗೆ ಮುಜುಗರ ಉಂಟುಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಸ್ಟಾಫ್ ರೂಂಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು!
ಉಪನ್ಯಾಸಕನ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿನಿಯರು, ಕೊನೆಗೆ ಒಟ್ಟಾಗಿ ಆತನ ವಿರುದ್ಧ ಧ್ವನಿ ಎತ್ತಿದ್ದಾರೆ. ಉಪನ್ಯಾಸಕನ ಅಸಭ್ಯ ವರ್ತನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿಯರು ನೇರವಾಗಿ ಕಾಲೇಜಿನ ಸ್ಟಾಫ್ ರೂಂಗೆ ತೆರಳಿ ಪ್ರಶ್ನಿಸಿದ್ದಾರೆ. ಈ ವೇಳೆ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ವಿದ್ಯಾರ್ಥಿನಿಯರು ಉಪನ್ಯಾಸಕನಿಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿಯರ ಆಕ್ರೋಶಕ್ಕೆ ತತ್ತರಿಸಿದ ಉಪನ್ಯಾಸಕ ಕೈಮುಗಿದು ಕ್ಷಮೆ ಯಾಚಿಸಿದ್ದಾನೆ ಎನ್ನಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಯರಿಂದ ತಪ್ಪಿಸಿಕೊಳ್ಳಲು ಕೊಠಡಿಯಲ್ಲಿದ್ದ ಬೀರುವಿನ ಸಂದಿಯಲ್ಲಿ ಅವಿತುಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಶಿಕ್ಷಕರ ವರ್ತನೆಗೆ ಪ್ರಶ್ನೆ; ಸೂಕ್ತ ಕ್ರಮಕ್ಕೆ ಒತ್ತಾಯ
ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯರ ಆರೋಪಗಳು ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಶಿಕ್ಷಕರ ಜವಾಬ್ದಾರಿಯುತ ವರ್ತನೆಯ ಕುರಿತು ಮತ್ತೊಮ್ಮೆ ಪ್ರಶ್ನೆಗಳು ಎದ್ದಿವೆ.
ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಕುರಿತು ಸೂಕ್ತ ತನಿಖೆ ನಡೆಸಿ, ಆರೋಪ ಸಾಬೀತಾದಲ್ಲಿ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ವಿದ್ಯಾರ್ಥಿನಿಯರು ಧೈರ್ಯದಿಂದ ಧ್ವನಿ ಎತ್ತಿರುವುದು ಗಮನ ಸೆಳೆದಿದ್ದರೂ, ಇಂತಹ ಪ್ರಕರಣಗಳಲ್ಲಿ ಕಾನೂನು ಪ್ರಕ್ರಿಯೆಯ ಮೂಲಕವೇ ನ್ಯಾಯ ದೊರೆಯುವುದು ಮುಖ್ಯವಾಗಿದೆ.
ವರದಿ: ನವೀನ್ ಕುಮಾರ್
ಕರುನಾಡು ಟೈಮ್ಸ್ | www.karunaadutimes.com
Hashtags #Mandya #Nagamangala #MandyaNews #KarnatakaNews #CollegeNews #StudentSafety #StudentsVoice #ಮಂಡ್ಯ #ನಾಗಮಂಗಲ #ವಿದ್ಯಾರ್ಥಿನಿಯರು #ಕರುನಾಡುಟೈಮ್ಸ್