ಬೆಂಗಳೂರು: ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಇದೇ ಬೆಳವಣಿಗೆಯ ನಡುವೆ, ತಂದೆಯ ವರ್ಷದ ತಿಥಿ ಕಾರ್ಯದಲ್ಲಿ ಪಾಲ್ಗೊಳ್ಳಲು ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಪ್ರದೋಷ್ಗೆ ನ್ಯಾಯಾಲಯದಿಂದ ಹಿನ್ನಡೆಯಾಗಿದೆ.
ದರ್ಶನ್ ಕುಟುಂಬದ ವಿರುದ್ಧ ಹೇಳಿಕೆ ನೀಡದಂತೆ ಕೋರ್ಟ್ ಸೂಚನೆ
ಧನ್ವೀರ್ ಮತ್ತು ವಿಜಯಲಕ್ಷ್ಮಿ ನಡುವಿನ ಜಟಾಪಟಿ ಪ್ರಕರಣದ ಹಿನ್ನೆಲೆಯಲ್ಲಿ ದರ್ಶನ್ ಹಾಗೂ ಅವರ ಕುಟುಂಬದವರ ಕುರಿತು ಕೆಲವು ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದ್ದವು. ಈ ಹಿನ್ನೆಲೆಯಲ್ಲಿ ತಮ್ಮ ಕಕ್ಷಿದಾರರು ಮತ್ತು ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸೂಕ್ತ ಆದೇಶ ಹೊರಡಿಸಬೇಕೆಂದು ದರ್ಶನ್ ಪರ ವಕೀಲರು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಮನವಿಯನ್ನು ಪರಿಗಣಿಸಿರುವ ಸೆಷನ್ಸ್ ಕೋರ್ಟ್, ದರ್ಶನ್ ಹಾಗೂ ಅವರ ಕುಟುಂಬದ ವಿರುದ್ಧ ಮಾತನಾಡುವ ವಿಚಾರದಲ್ಲಿ ನಿರ್ಬಂಧ ವಿಧಿಸುವ ಆದೇಶ ಹೊರಡಿಸಿದೆ.
ಪ್ರದೋಷ್ಗೆ ಮಧ್ಯಂತರ ಜಾಮೀನು ಇಲ್ಲ
ಇನ್ನೊಂದೆಡೆ, ತಂದೆಯ ವರ್ಷದ ತಿಥಿ ಕಾರ್ಯದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಮೂರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಪ್ರದೋಷ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರದೋಷ್ ಪರ ವಕೀಲರು ಕುಟುಂಬದ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಲು ಕನಿಷ್ಠ ಮೂರು ವಾರಗಳ ಕಾಲ ಜಾಮೀನು ನೀಡಬೇಕೆಂದು ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಆದರೆ, ಈ ಅರ್ಜಿಗೆ ದರ್ಶನ್ ಪರ ವಕೀಲರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಮಾಫಿ ಸಾಕ್ಷಿಯ ಷರತ್ತುಗಳೇನು?
ಪ್ರದೋಷ್ ಮಾಫಿ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ವಾದವನ್ನು ದರ್ಶನ್ ಪರ ವಕೀಲ ಹಷ್ಮತ್ ಪಾಷ ಮಂಡಿಸಿದ್ದರು. ಸಾಕ್ಷ್ಯ ವಿಚಾರಣೆ ಹಾಗೂ ಅಡ್ಡ ವಿಚಾರಣೆ ಪೂರ್ಣಗೊಳ್ಳುವವರೆಗೂ ಪ್ರದೋಷ್ ನ್ಯಾಯಾಂಗ ಬಂಧನದಲ್ಲಿಯೇ ಇರಬೇಕು ಎಂದು ಅವರು ಪ್ರತಿಪಾದಿಸಿದ್ದರು.
ಅಲ್ಲದೆ, ನಿರ್ದಿಷ್ಟ ಷರತ್ತುಗಳ ಆಧಾರದ ಮೇಲೆ ನ್ಯಾಯಾಲಯ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿದೆ. ಇದೀಗ ಅವರಿಗೆ ಜಾಮೀನು ನೀಡಿದರೆ ನ್ಯಾಯಾಲಯ ವಿಧಿಸಿರುವ ಷರತ್ತುಗಳ ಉದ್ದೇಶವೇ ವಿಫಲವಾಗಬಹುದು ಎಂದು ವಾದಿಸಿದ್ದರು.
ಒಟ್ಟಿನಲ್ಲಿ, ಒಂದೆಡೆ ದರ್ಶನ್ ಮತ್ತು ಕುಟುಂಬದ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಹೊರಬಿದ್ದಿದ್ದರೆ, ಮತ್ತೊಂದೆಡೆ ಪ್ರದೋಷ್ ಅವರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತವಾಗಿದೆ. ಈ ಎರಡೂ ಬೆಳವಣಿಗೆಗಳು ದರ್ಶನ್ ಪ್ರಕರಣದ ಕಾನೂನು ಹೋರಾಟದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿವೆ.
ವರದಿ: ನವೀನ್ ಕುಮಾರ್