ಬೆಂಗಳೂರು: ಕನ್ನಡ ನಾಡು, ನುಡಿ, ಸಂಸ್ಕೃತಿಯ ಹೆಮ್ಮೆಯ ಸಂಕೇತವಾದ ಕನ್ನಡ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ನಡುವೆ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಎರಡೂ ಧ್ವಜಗಳನ್ನು ಅವರೇ ಆರೋಹಣ ಮಾಡಿರುವುದು ಈ ಬಾರಿಯ ಕಾರ್ಯಕ್ರಮದ ವಿಶೇಷವಾಗಿತ್ತು.
ಈ ಹಿಂದೆ ರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣವನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಧ್ವಜಾರೋಹಣವನ್ನು ಶಾಲಾ ಶಿಕ್ಷಣ ಸಚಿವರು ನೆರವೇರಿಸುವ ಸಂಪ್ರದಾಯವಿತ್ತು. ಆದರೆ ಈ ಬಾರಿ ಎರಡೂ ಧ್ವಜಾರೋಹಣದ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಗಾಯನ ಮಾಡಲಾಯಿತು.
ಕನ್ನಡಿಗರ ಸ್ವಾಭಿಮಾನದ ಸಂಕೇತ ಕನ್ನಡ ರಾಜ್ಯೋತ್ಸವ: ಮಧು ಬಂಗಾರಪ್ಪ
ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ನವೆಂಬರ್ 1 ಕನ್ನಡಿಗರ ಪಾಲಿಗೆ ಕೇವಲ ಒಂದು ದಿನವಲ್ಲ; ಅದು ನಾಡಿನ ಇತಿಹಾಸ, ಸಂಸ್ಕೃತಿಯ ವೈಭವ ಹಾಗೂ ಕನ್ನಡಿಗರ ಸ್ವಾಭಿಮಾನದ ಸಂಕೇತ ಎಂದು ಬಣ್ಣಿಸಿದರು.
ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಬೆಳವಣಿಗೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ ಸುಮಾರು 1.16 ಕೋಟಿ ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೂ ವೇಗ ನೀಡಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ.7.5ರಷ್ಟು ಮೀಸಲಾತಿ ಕಲ್ಪಿಸಲಾಗುತ್ತಿದೆ. ಅಲ್ಲದೆ, 17 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಗರ ಪ್ರದೇಶದ ಶಾಲಾ ಮಕ್ಕಳಿಗೆ ಗ್ರಾಮೀಣ ಬದುಕು, ಕೃಷಿ ಮತ್ತು ಸ್ಥಳೀಯ ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ 'ಗ್ರಾಮಾನುಭವ' ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಇದು ಮುಖ್ಯಮಂತ್ರಿ ಅವರ ಕನಸಿನ ಯೋಜನೆಯಾಗಿದೆ ಎಂದು ಹೇಳಿದರು.
ಇದರ ಜೊತೆಗೆ ರಾಜ್ಯದಲ್ಲಿ 1,200 ಕೆಪಿಎಸ್ (KPS) ಶಾಲೆಗಳನ್ನು ಆರಂಭಿಸುವ ಯೋಜನೆ ಪ್ರಗತಿಯಲ್ಲಿದ್ದು, ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಒಟ್ಟಿನಲ್ಲಿ, ಕನ್ನಡ ರಾಜ್ಯೋತ್ಸವದ ಸಂಭ್ರಮದ ನಡುವೆಯೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡುವ ವಿಚಾರ ಚರ್ಚೆಗೆ ಬಂದಿರುವುದು ಕನ್ನಡಾಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಕುರಿತು ಯಾವ ನಿರ್ಧಾರ ಹೊರಬೀಳಲಿದೆ ಎಂಬುದರ ಮೇಲೆ ಇದೀಗ ಎಲ್ಲರ ಗಮನ ನೆಟ್ಟಿದೆ.
ವರದಿ: ನವೀನ್ ಕುಮಾರ್