ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛಾಟಿತ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಸೇರಿದಂತೆ ಮೂವರಿಗೆ ಬೆಂಗಳೂರಿನ 66ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕೃಪಾ ಆಳ್ವಾ (Kripa Alva), ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ, ಮೂವರಿಗೂ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಿದೆ.
ತನಿಖೆಗೆ ಸಹಕರಿಸುವಂತೆ ಸೂಚನೆ
ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯ ಕೆಲವು ಪ್ರಮುಖ ಷರತ್ತುಗಳನ್ನು ವಿಧಿಸಿದೆ. ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದಾಗ ಅರ್ಜಿದಾರರು ಕಡ್ಡಾಯವಾಗಿ ಹಾಜರಾಗಿ ತನಿಖೆಗೆ ಸಹಕರಿಸಬೇಕು. ಅಲ್ಲದೆ, ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕುವುದು ಅಥವಾ ಅವರ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಬಾರದು ಎಂದು ಸ್ಪಷ್ಟಪಡಿಸಿದೆ.
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ನ್ಯಾಯಾಲಯದ ಈ ಆದೇಶ ಇದೀಗ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಗಮನ ಸೆಳೆದಿದೆ. ಮುಂದಿನ ತನಿಖೆಯಲ್ಲಿ ಯಾವೆಲ್ಲ ಬೆಳವಣಿಗೆಗಳು ನಡೆಯಲಿವೆ ಎಂಬ ಕುತೂಹಲ ಮೂಡಿದೆ.
ವರದಿ: ನವೀನ್ ಕುಮಾರ್
www.karunaadutimes.com
🌐 ಇನ್ನಷ್ಟು ಕ್ಷಣಕ್ಷಣದ ಕನ್ನಡ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ.
Hashtags:#Siddaramaiah #KripaAlva #StingOperation #AnticipatoryBail #KarnatakaPolitics #BengaluruNews #KannadaNews #KarunaduTimes