ಚಿಕ್ಕೋಡಿ: ಮಾನವೀಯತೆಯನ್ನೇ ಪ್ರಶ್ನಿಸುವಂತಹ ಮನಕಲಕುವ ಘಟನೆಯೊಂದು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದ ಕಾಗವಾಡ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ನವಜಾತ ಶಿಶುವೊಂದನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಬೀದಿ ನಾಯಿಗಳು ಮಗುವಿನ ದೇಹವನ್ನು ಎಳೆದಾಡಿರುವ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ.
ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ದೇಹವನ್ನು ಬೀದಿ ನಾಯಿಗಳು ಎಳೆದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ. ಈ ವೇಳೆ ಮಗುವಿನ ದೇಹದ ಅವಶೇಷಗಳಾದ ತಲೆ ಹಾಗೂ ಒಂದು ಕಾಲು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ದೃಶ್ಯ ಕಂಡ ಸ್ಥಳೀಯರು ತೀವ್ರ ಆಘಾತಕ್ಕೊಳಗಾಗಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಲಭ್ಯವಾಗುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಲಕ್ಕಪ್ಪ ಅಗ್ನಿ ಅವರ ನೇತೃತ್ವದಲ್ಲಿ ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಮಗುವನ್ನು ಯಾರು ಹಾಗೂ ಯಾವ ಕಾರಣಕ್ಕಾಗಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ? ಈ ಘಟನೆಗೆ ಸಂಬಂಧಿಸಿದಂತೆ ಹಲವು ಪ್ರಶ್ನೆಗಳು ಮೂಡಿದ್ದು, ಮಗುವಿನ ಗುರುತು ಹಾಗೂ ಘಟನೆಯ ಹಿಂದಿನ ನೈಜ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮುಗ್ಧ ಜೀವವೊಂದರ ದುರಂತ ಅಂತ್ಯಕ್ಕೆ ಕಾರಣವೇನು ಎಂಬ ಪ್ರಶ್ನೆ ಇದೀಗ ಸಾರ್ವಜನಿಕರನ್ನು ಕಾಡುತ್ತಿದೆ. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
ವರದಿ: ನವೀನ್ ಕುಮಾರ್
Hashtags:#Athani #Chikkodi #Belagavi #BreakingNews #KannadaNews #CrimeNews #KarnatakaNews #KarunaaduTimes #ಅಥಣಿ #ಚಿಕ್ಕೋಡಿ #ಬೆಳಗಾವಿ