ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಮೂವರು ಬೇಟೆಗಾರರು ಗುಂಡೇಟಿಗೆ ಬಲಿಯಾದ ಪ್ರಕರಣದ ತನಿಖೆ ಯಾವುದೇ ವಿಳಂಬವಿಲ್ಲದೆ ನಡೆಯುತ್ತಿದೆ. ಈ ಪ್ರಕರಣದ ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸುವ ಪ್ರಶ್ನೆಯೇ ಇಲ್ಲ ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಹನೂರು ತಾಲೂಕಿನ ಕಾವೇರಿ ಅರಣ್ಯ ಪ್ರದೇಶದಲ್ಲಿ ನಡೆದ ಮೂವರು ಬೇಟೆಗಾರರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (CID) ನಡೆಸುತ್ತಿದೆ. ತನಿಖೆ ತನ್ನದೇ ಆದ ರೀತಿಯಲ್ಲಿ ಮುಂದುವರಿದಿದ್ದು, ಸರ್ಕಾರ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆಯಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳು ಸರಿಯಲ್ಲ ಎಂದು ತಿಳಿಸಿದರು.
ಅರಣ್ಯ ಸಿಬ್ಬಂದಿಗೆ ಸಚಿವರ ಅಭಯ
ಪ್ರಕರಣದ ಬಳಿಕ ಧ್ವಂಸಗೊಂಡಿರುವ ಕಳ್ಳಬೇಟೆ ತಡೆ ಶಿಬಿರಗಳು ಹಾಗೂ ಅರಣ್ಯ ವಸತಿಗೃಹಗಳನ್ನು ಪುನರ್ನಿರ್ಮಿಸಿ, ದುರಸ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಅರಣ್ಯ ಸಿಬ್ಬಂದಿ ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಧೈರ್ಯದಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಸಿಬ್ಬಂದಿಯ ಸುರಕ್ಷತೆಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.
ಖಾಸಗಿ ಜಮೀನು ಸ್ವಾಧೀನಕ್ಕೆ ಕ್ರಮ
ಕಣಿಯನಪುರ ಕಾರಿಡಾರ್ ವ್ಯಾಪ್ತಿಯಲ್ಲಿ ಖಾಸಗಿ ಜಮೀನುಗಳಿದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಪರವಾನಗಿ ಇಲ್ಲದ ಬಂದೂಕು ಹೊಂದಿದ್ದರೆ ಕ್ರಮದ ಎಚ್ಚರಿಕೆ
ಇನ್ನು ಬಂದೂಕು ಹೊಂದಿರುವ ವಿಚಾರವಾಗಿ ಮಾತನಾಡಿದ ಸಚಿವರು, ಸೂಕ್ತ ಪರವಾನಗಿ ಇಲ್ಲದೆ ಯಾರೂ ಬಂದೂಕುಗಳನ್ನು ಇಟ್ಟುಕೊಳ್ಳುವಂತಿಲ್ಲ. ಪರವಾನಗಿ ಇಲ್ಲದ ಬಂದೂಕುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾವೇರಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದ ತನಿಖೆ, ಅರಣ್ಯ ಸಿಬ್ಬಂದಿಯ ಸುರಕ್ಷತೆ ಹಾಗೂ ಕಳ್ಳಬೇಟೆ ನಿಯಂತ್ರಣದ ವಿಚಾರಗಳು ಇದೀಗ ಮಹತ್ವ ಪಡೆದುಕೊಂಡಿವೆ. ತನಿಖೆಯ ಅಂತಿಮ ವರದಿಯಲ್ಲಿ ಯಾವ ಅಂಶಗಳು ಬಹಿರಂಗವಾಗಲಿವೆ ಎಂಬುದು ಕುತೂಹಲ ಮೂಡಿಸಿದೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ಸ್ಥಳೀಯ ಹಾಗೂ ರಾಜ್ಯದ ಪ್ರಮುಖ ಸುದ್ದಿಗಳಿಗಾಗಿ ಭೇಟಿ ನೀಡಿ:
www.karunaadutimes.com