ಕಾರವಾರ: ರೈಲ್ವೆ ಅಂಡರ್ಬ್ರಿಡ್ಜ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಏಕಾಏಕಿ ಮಣ್ಣು ಕುಸಿದು ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿಯೊಬ್ಬರು ದಾರುಣವಾಗಿ ಮೃತಪಟ್ಟಿದ್ದು, ಮತ್ತೊಬ್ಬ ಹಿರಿಯ ಇಂಜಿನಿಯರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಶುಕ್ರವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.
ದಾಂಡೇಲಿ ತಾಲೂಕಿನ ಕರ್ಕಾ–ಬರ್ಚಿ ರೈಲ್ವೆ ಮಾರ್ಗದ ಅಳ್ನಾವರ–ಅಂಬೇವಾಡಿ ಸೆಕ್ಷನ್ನ ಎಲ್ಸಿ ನಂ.11ರಲ್ಲಿ ಅಂಡರ್ಬ್ರಿಡ್ಜ್ ಕಾಮಗಾರಿ ಪ್ರಗತಿಯಲ್ಲಿತ್ತು. ಈ ವೇಳೆ ಕಾಮಗಾರಿಗಾಗಿ ಅಗೆದು ತೆಗೆದಿದ್ದ ಮಣ್ಣು ಏಕಾಏಕಿ ಕುಸಿದು, ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ಮೇಲೆ ಬಿದ್ದಿದೆ.
ದುರಂತದಲ್ಲಿ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಾಲವಾಡಗಿ ಗ್ರಾಮದ ನಿವಾಸಿ, 33 ವರ್ಷದ ಮಹೇಶ ಶೇಖಪ್ಪ ತಳವಾರ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೈಲ್ವೆ ಇಲಾಖೆಯ ತಾಂತ್ರಿಕ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಶ ಅವರ ಅಕಾಲಿಕ ಸಾವು ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ.
ಇದೇ ಘಟನೆಯಲ್ಲಿ ಸ್ಥಳದಲ್ಲಿದ್ದ ರೈಲ್ವೆ ಇಲಾಖೆಯ ಹಿರಿಯ ವಿಭಾಗೀಯ ಇಂಜಿನಿಯರ್ ಮಕ್ತುಂ ಹುಸೇನ್ ಮಹಮ್ಮದ್ ಹುಸೇನ್ ಮುಲ್ಲಾ (57) ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಿಪಿಐ ಶಿವಾನಂದ ಅಂಬಿಗೇರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಕಾಮಗಾರಿ ಸ್ಥಳದಲ್ಲಿ ಸಂಭವಿಸಿದ ಈ ದುರಂತವು ಕಾರ್ಮಿಕರ ಸುರಕ್ಷತಾ ಕ್ರಮಗಳ ಮಹತ್ವವನ್ನು ಮತ್ತೊಮ್ಮೆ ನೆನಪಿಸಿದ್ದು, ಒಬ್ಬ ಸಿಬ್ಬಂದಿಯ ಜೀವವನ್ನು ಬಲಿ ಪಡೆದಿರುವ ಘಟನೆ ಸ್ಥಳೀಯರಲ್ಲಿ ವಿಷಾದ ಮೂಡಿಸಿದೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ಸ್ಥಳೀಯ ಮತ್ತು ರಾಜ್ಯದ ಪ್ರಮುಖ ಸುದ್ದಿಗಳಿಗಾಗಿ ಭೇಟಿ ನೀಡಿ: www.karunaadutimes.ಕಂ
Tags:#Dandeli #UttaraKannada #Karwar #RailwayAccident #RailwayBridge #KarnatakaNews #KarunaaduTimes #BreakingNews