ಚಿಕ್ಕಮಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದೇವಿರಮ್ಮನ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಬೆನ್ನಲ್ಲೇ, ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಾರೀ ಅವಘಡ ಸಂಭವಿಸಿದೆ. ಬೆಟ್ಟದ ಕಡಿದಾದ ಹಾದಿಯಲ್ಲಿ ಭಕ್ತರ ಸುರಕ್ಷತೆಗಾಗಿ ಅಳವಡಿಸಲಾಗಿದ್ದ ಕಂಬಿ ಏಕಾಏಕಿ ಮುರಿದು ಬಿದ್ದ ಪರಿಣಾಮ, ಓರ್ವ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಟ್ಟದ ತುದಿಯತ್ತ ಸಾಗುತ್ತಿದ್ದ ಸಂದರ್ಭದಲ್ಲಿ ಕಂಬಿ ಮುರಿದು ಬಿದ್ದಿದ್ದು, ಏಕಾಏಕಿ ಸಂಭವಿಸಿದ ಅವಘಡದಿಂದ ಭಕ್ತರಲ್ಲಿ ಆತಂಕ ಹಾಗೂ ಗೊಂದಲದ ವಾತಾವರಣ ನಿರ್ಮಾಣವಾಗಿದೆ.
ಘಟನೆಯಲ್ಲಿ ಗಾಯಗೊಂಡ ಭಕ್ತರಿಗೆ ತಕ್ಷಣ ನೆರವಿಗೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಟ್ಟದಿಂದ ಅವರನ್ನು ಹೊತ್ತು ಕೆಳಕ್ಕೆ ಕರೆತಂದಿದ್ದಾರೆ. ಬಳಿಕ ಆಂಬ್ಯುಲೆನ್ಸ್ಗಳ ಮೂಲಕ ಗಾಯಾಳುಗಳನ್ನು ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಮುಂದುವರಿದಿದೆ.
🙏 ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರ ಆಗಮನ
ದೀಪಾವಳಿ ಹಬ್ಬದ ಸಂಭ್ರಮದ ನಡುವೆ ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ದೇವಿರಮ್ಮನ ಆಶೀರ್ವಾದ ಪಡೆಯಲು ಭಕ್ತಸಾಗರವೇ ಬೆಟ್ಟದತ್ತ ಹರಿದುಬಂದಿದೆ. ಈ ಬಾರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿರುವುದಾಗಿ ಅಂದಾಜಿಸಲಾಗಿದೆ.
ಇಂದು ದೇವಿರಮ್ಮನ ದರ್ಶನಕ್ಕೆ ಕೊನೆಯ ದಿನವಾಗಿರುವುದರಿಂದ ನಿನ್ನೆಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಹಸಿರು ಪ್ರಕೃತಿಯ ನಡುವೆ ಇರುವ ಕಡಿದಾದ ಬೆಟ್ಟದ ಹಾದಿಯಲ್ಲಿ ಭಕ್ತರು ಅಪಾರ ಶ್ರದ್ಧೆ ಮತ್ತು ಭಕ್ತಿಯಿಂದ ಸಾಗುತ್ತಿದ್ದಾರೆ.
ಆದರೆ, ಭಕ್ತರ ಸುರಕ್ಷತೆಗಾಗಿ ಅಳವಡಿಸಿದ್ದ ಕಂಬಿಯೇ ಮುರಿದು ಬಿದ್ದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬೆಟ್ಟದಲ್ಲಿ ಹೆಚ್ಚುತ್ತಿರುವ ಜನದಟ್ಟಣೆಯನ್ನು ನಿಯಂತ್ರಿಸುವುದು, ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲಿಸುವುದು ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ಈಗ ತುರ್ತು ಆದ್ಯತೆಯಾಗಿದೆ.
ಭಕ್ತಿಯಾತ್ರೆಯ ನಡುವೆ ಸಂಭವಿಸಿದ ಈ ಅವಘಡ ಮತ್ತೆ ಸಾರ್ವಜನಿಕ ಸ್ಥಳಗಳಲ್ಲಿನ ಸುರಕ್ಷತಾ ವ್ಯವಸ್ಥೆಗಳ ಬಗ್ಗೆ ಎಚ್ಚರಿಕೆ ಮೂಡಿಸಿದೆ.
ವರದಿ: ನವೀನ್ ಕುಮಾರ್
🌐 ಹೆಚ್ಚಿನ ಸುದ್ದಿಗಳಿಗಾಗಿ ಭೇಟಿ ನೀಡಿ: www.karunaadutimes.com