ಕಾರವಾರ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಇಲಾಖೆಯ ಸಿಬ್ಬಂದಿಯೇ ದರೋಡೆ ಪ್ರಕರಣವೊಂದರಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿದೆ. ಮಂಗಳೂರಿನಲ್ಲಿ ನಡೆದ ₹1.15 ಕೋಟಿ ಮೌಲ್ಯದ ಹವಾಲಾ ಹಣ ದರೋಡೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ಶ್ರೀಶೈಲ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಬೆಳವಣಿಗೆ ಪೊಲೀಸ್ ಇಲಾಖೆಯಲ್ಲಿ ಭಾರೀ ಸಂಚಲನ ಮೂಡಿಸಿದೆ.
ಅಷ್ಟಕ್ಕೂ ನಡೆದಿದ್ದೇನು?
ದಾವಣಗೆರೆಯಿಂದ ಮಂಗಳೂರಿಗೆ ಸಾಗಿಸಲಾಗುತ್ತಿದ್ದ ₹1.15 ಕೋಟಿ ಹವಾಲಾ ಹಣವನ್ನು ದೋಚುವ ಉದ್ದೇಶದಿಂದ ಸತ್ಯನಾರಾಯಣ ಎಂಬುವವರನ್ನು ಅಪಹರಿಸಲಾಗಿತ್ತು. ಬಳಿಕ ಅವರ ಬಳಿಯಿದ್ದ ಹಣವನ್ನು ದರೋಡೆ ಮಾಡಲಾಗಿತ್ತು. ಈ ಸಂಬಂಧ ಸತ್ಯನಾರಾಯಣ ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.
ತನಿಖೆಯ ವೇಳೆ ಈ ಕೃತ್ಯದ ಹಿಂದೆ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್ ಅವರ ಪಾತ್ರವಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕಾರವಾರದ ಕೆಲವು ಯುವಕರನ್ನು ಬಳಸಿಕೊಂಡು ಅಪಹರಣ ಮತ್ತು ಹಣ ದರೋಡೆಗೆ ಸಂಚು ರೂಪಿಸಿದ ಆರೋಪ ಶ್ರೀಶೈಲ್ ಮೇಲಿದೆ.
ಇನ್ನು ಕಾರವಾರ ತಾಲೂಕಿನ ಕಿನ್ನರ ಗ್ರಾಮದ ಗಣೇಶ ಕೋಳಂಕರ್ ಎಂಬ ಯುವಕನನ್ನು ಈ ಕೃತ್ಯಕ್ಕೆ ಬಳಸಿಕೊಂಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾಗಿರುವ ಗಣೇಶ ಕೋಳಂಕರ್ಗಾಗಿ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ.
ಇತ್ತ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಕಾರವಾರ ಟ್ರಾಫಿಕ್ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಶ್ರೀಶೈಲ್ ಅವರನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಅಮಾನತುಗೊಳಿಸಿದ್ದಾರೆ.
ಒಟ್ಟಿನಲ್ಲಿ, ಕೋಟ್ಯಂತರ ರೂಪಾಯಿ ಮೌಲ್ಯದ ಹವಾಲಾ ಹಣ ದರೋಡೆ ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರ ಹೆಸರೇ ಕೇಳಿಬಂದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ದರೋಡೆ ಸಂಚಿನ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ? ಹಣದ ಸಂಪೂರ್ಣ ಜಾಲವನ್ನು ಪೊಲೀಸರು ಬಯಲಿಗೆಳೆಯುತ್ತಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ವರದಿ: ನವೀನ್ ಕುಮಾರ್
ಸಂಪೂರ್ಣ ಸುದ್ದಿ ಓದಲು ಭೇಟಿ ನೀಡಿ 👇 🌐 www.karunaadutimes.com
Tags:#Mangaluru #Karwar #HawalaRobbery #KarnatakaCrime #CrimeNews #KarunaaduTimes #KannadaNews