ಬೀದರ್: ದೀಪಾವಳಿ ಸಂಭ್ರಮದ ನಡುವೆ ಪಟಾಕಿಯಿಂದ ಸಂಭವಿಸಿದ ಅಗ್ನಿ ಅವಘಡವೊಂದು ಭಾರೀ ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದ ಬರೋಬ್ಬರಿ ಆರು ಕಾರುಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಪೊಲೀಸ್ ಠಾಣೆಯ ಆವರಣದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಜಪ್ತಿ ಮಾಡಿ ನಿಲ್ಲಿಸಲಾಗಿದ್ದ ಆರು ಕಾರುಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಿಡಿಸಲಾದ ಪಟಾಕಿಯ ಕಿಡಿಯಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ನೋಡನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಆವರಿಸಿ, ಆರು ಕಾರುಗಳು ಧಗಧಗನೆ ಹೊತ್ತಿ ಉರಿದಿವೆ. ಘಟನೆಯಿಂದ ಪೊಲೀಸ್ ಠಾಣೆಯ ಸುತ್ತಮುತ್ತ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪುವಷ್ಟರಲ್ಲಿ ಆರು ಕಾರುಗಳು ಬಹುತೇಕ ಸುಟ್ಟು ಕರಕಲಾಗಿದ್ದವು.
ಒಟ್ಟಿನಲ್ಲಿ, ದೀಪಾವಳಿ ಸಂಭ್ರಮದ ನಡುವೆ ಸಂಭವಿಸಿದ ಈ ಅಗ್ನಿ ಅವಘಡದಿಂದ ಪೊಲೀಸ್ ಠಾಣೆಯ ಆವರಣದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ವರದಿ: ನವೀನ್ ಕುಮಾರ್
Hashtags:#Bidar #Humnabad #BidarNews #FireAccident #CarFire #DiwaliFire #KarnatakaNews #BidarPolice #HumnabadPolice #BreakingNews #KannadaNews #KarunaaduTimes #ಕರ್ನಾಟಕಸುದ್ದಿ #ಬೀದರ್ #ಹುಮ್ನಾಬಾದ್ #ಅಗ್ನಿಅವಘಡ #ಪಟಾಕಿ #ದೀಪಾವಳಿ