ಶಿವಮೊಗ್ಗ: ಸರ್ಕಾರಿ ಶಾಲೆಯೊಂದರಲ್ಲಿ ಕಿಡಿಗೇಡಿಗಳು ನಡೆಸಿದ್ದಾರೆ ಎನ್ನಲಾದ ಕೃತ್ಯಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಅಡುಗೆ ಕೋಣೆಗೆ ಬೆಂಕಿ ಹಚ್ಚಿ, ಗ್ಯಾಸ್ ಸಿಲಿಂಡರ್ ಸ್ಫೋಟಿಸಲು ಸಂಚು ರೂಪಿಸಲಾಗಿತ್ತೇ ಎಂಬ ಅನುಮಾನ ಇದೀಗ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಸಾಗರ ತಾಲೂಕಿನ ತುಮರಿ ಸಮೀಪದ ಕೆರೆಕೈ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಶಾಲೆಯ ಅಡುಗೆ ಕೋಣೆಯ ಬಾಗಿಲಿನ ಬಳಿ ಕಸಕಡ್ಡಿಗಳನ್ನು ರಾಶಿ ಹಾಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಶಾಲೆಯ ಆವರಣದಲ್ಲಿದ್ದ ಪೈಪ್ಲೈನ್, ಗೇಟ್ ಹಾಗೂ ನೀರಿನ ಟ್ಯಾಂಕ್ಗಳಿಗೂ ಹಾನಿ ಮಾಡಿದ್ದಾರೆ.
ಗ್ಯಾಸ್ ಸಿಲಿಂಡರ್ ಸ್ಫೋಟಿಸುವ ಉದ್ದೇಶದಿಂದಲೇ ಈ ಕೃತ್ಯ ಎಸಗಲಾಗಿದೆ ಎಂಬುದು ಗ್ರಾಮಸ್ಥರ ಗಂಭೀರ ಆರೋಪ. ಅದೃಷ್ಟವಶಾತ್, ಸಂಭವಿಸಬಹುದಾದ ದೊಡ್ಡ ಅನಾಹುತದ ಆತಂಕದ ನಡುವೆ ಘಟನೆ ಬೆಳಕಿಗೆ ಬಂದಿದ್ದು, ಶಾಲೆಯ ಸುರಕ್ಷತೆ ಕುರಿತು ಹಲವು ಪ್ರಶ್ನೆಗಳು ಎದ್ದಿವೆ.
ಇನ್ನು ಶಾಲೆಯ ಆವರಣದಲ್ಲಿ ನಡೆದಿರುವ ಈ ಕೃತ್ಯವನ್ನು ಖಂಡಿಸಿ ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ತುಮರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಟಿ. ಸತ್ಯನಾರಾಯಣ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ರಸ್ತೆ ತಡೆ ನಡೆಸಿದ ಸ್ಥಳೀಯರು, ಟೈರ್ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ಕೃತ್ಯಗಳು ಪದೇಪದೇ ನಡೆಯುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ. ಇತ್ತೀಚೆಗಷ್ಟೇ ಗ್ರಾಮದ ರಂಗಮಂದಿರಕ್ಕೂ ದುಷ್ಕರ್ಮಿಗಳು ಹಾನಿ ಮಾಡಿದ್ದರು ಎನ್ನಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಶಾಲೆಯಂತಹ ಸುರಕ್ಷಿತ ಸ್ಥಳದಲ್ಲೇ ಇಂತಹ ಘಟನೆ ನಡೆದಿರುವುದು ಪೋಷಕರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ಶಾಲೆಗೆ ಭದ್ರತೆ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ವರದಿ: ನವೀನ್ ಕುಮಾರ್
🌐 ಇನ್ನಷ್ಟು ಸ್ಥಳೀಯ ಸುದ್ದಿಗಳಿಗಾಗಿ ಭೇಟಿ ನೀಡಿ:
www.karunaadutimes.com
🔔 ಕ್ಷಣಕ್ಷಣದ ಸುದ್ದಿಗಳಿಗಾಗಿ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ – ನಿಮ್ಮೂರಿನ ಸುದ್ದಿಯನ್ನು ನಿಮ್ಮ ಬೆರಳ ತುದಿಯಲ್ಲಿ ಪಡೆಯಿರಿ!
Hashtags:#Shivamogga #Sagar #Tumari #Kerekai #SchoolNews #FireIncident #Protest #KarnatakaNews #BreakingNews #KarunaaduTimes #KannadaNews #ಕರ್ನಾಟಕಸುದ್ದಿ #ಶಿವಮೊಗ್ಗ #ಸಾಗರ #ಪ್ರತಿಭಟನೆ